ಶಾಂತಿ ಸಮಿತಿ ಸಭೆ,ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಡಿ.08 : ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣವನ್ನು ನಿರ್ಮಿಸುವುದು ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನಗರದ ಜತೆಯಲ್ಲಿರುವ ಭಯದ ವಾತಾವರಣವನ್ನು ಹೋಗಲಾಡಿಸಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವಾರು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಹಲವಾರು ಮಂದಿ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು. ಔಷಧಿಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಫಾರ್ಮಸಿಸ್ಟ್ಗಳ ಸಭೆಯನ್ನು ಆದಷ್ಟು ಬೇಗನೆ ಕರೆಯಲಾಗುವುದು. ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗುತ್ತದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾAತರಾಜು ಅವರು ಮಾತನಾಡಿ, ಶಿವಮೊಗ್ಗ ನಗರದ ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರಿಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಯ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.

ಅಭಿಪ್ರಾಯ ಮಂಡನೆೆ: ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ಸಭೆಯ ಮುಂದಿರಿಸಿದರು. ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಿನಿಂದ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು  ನಿಯಂತ್ರಿಸಲು ಸಾಧ್ಯ. 144ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿ ನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್ ಜಾರಿಯಲ್ಲಿರುವಾಗ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ವಿವಿಧ ಗಣ್ಯರು ಮನವಿ ಮಾಡಿದರು.

ಉಪ ಮೇಯರ್ ಸುರೇಖಾ ಮುರುಳಿಧರ್, ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.