*ಬಿಎಸ್ ಯಡಿಯೂರಪ್ಪನವರು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸುತ್ತೇನೆ: ಸಚಿವ ಡಾ.ನಾರಾಯಣಗೌಡ*

ಶಿವಮೊಗ್ಗ ಜ, 26: ಗಣರಾಜೋತ್ಸವ ದಿನ ಪ್ರಯುಕ್ತ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಧ್ವಜಾರೋಹಣ ನೆರವೇರಿಸಿದರು. 

ಸಚಿವ ನಾರಾಯಣಗೌಡ ಅವರ ಗಣರಾಜ್ಯೋತ್ಸವದ ಸಂದೇಶ: 
ಪ್ರಜಾಪ್ರಭುತ್ವದ ತಳಹದಿಯಾದ ಸಂವಿಧಾನವನ್ನು ಹಾಗೂ ಮಾನವ ಹಕ್ಕುಗಳನ್ನು ನೀಡಿದ ಈ ಸುದಿನದ ನೆನಪು ಅವಿಸ್ಮರಣೀಯ. ಇಂದು ಇಡೀ ದೇಶದಲ್ಲಿ ಕೊರೊನಾ ಆತಂಕದ ನಡುವೆಯೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.  ಕೊರೋನಾ ನಿರ್ವಹಣೆಗೆ ನಮ್ಮ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

ಸಂವಿಧಾನ ರೂಪಿಸಿಕೊಟ್ಟ ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ, ತನ್ನ ಅಸ್ಮಿತೆಯನ್ನೂ ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವುದು ನಮ್ಮ ಹೆಮ್ಮೆಯ ಕರ್ನಾಟಕ. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿರವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಹಲವು ಹೊಸ ಯೋಜನೆಗಳ ಮೂಲಕ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ಯುವ ಸಬಲೀಕರಣ, ನೀರಾವರಿ ಇನ್ನಿತರ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ ಎಂದು ಸಚಿವರು ತಿಳಿಸಿದರು.
ರೈತಾಪಿ ಕುಟುಂಬದ ವಿದ್ಯಾರ್ಥಿಗಳಿಗಾಗಿ ರೈತ ವಿದ್ಯಾನಿಧಿ ಯೋಜನೆ, 58ಕ್ಕೂ ಅಧಿಕ ನಾಗರಿಕ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸುವ ಜನಸೇವಕ ಎಂಬ ವಿನೂತನ ಕಾರ್ಯಕ್ರಮ, ಸುಮಾರು 800ರಷ್ಟು ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ತರುವ ಗ್ರಾಮ-ಒನ್ ಎಂಬ ವಿಶೇಷ ಯೋಜನೆ, 33ಇಲಾಖೆಗಳ ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಕುಂದುಕೊರತೆಗಳ ನಿವಾರಣೆಗೆ ಜನಸ್ಪಂದನ ವ್ಯವಸ್ಥೆ, ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯಗಳ ಉನ್ನತೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ. 

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ 14 ಅಮೃತ ಯೋಜನೆಗಳನ್ನು ಘೋಷಿಸಲಾಗಿದೆ.  ಅಮೃತ ಸಮುದಾಯ ದತ್ತಿ ಅಭಿವೃದ್ಧಿ ಯೋಜನೆಯಲ್ಲಿ ಆಯ್ದ 750 ಗ್ರಾಮಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನಿಮ್ಹಾನ್ಸ್ ಸಹಯೋಗದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಯುವ ಸ್ಪಂದನ ಕೇಂದ್ರಗಳನ್ನು ತೆರೆಯಲಾಗಿದ್ದು, ಯುವ ಜನತೆಯನ್ನು ಮಾನಸಿಕವಾಗಿ ಸದೃಢಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಸಂಪರ್ಕ ರಸ್ತೆಗಳು, ಸೇತುವೆಗಳು, ನೂತನ ರೈಲು ಮಾರ್ಗ ಸಂಪರ್ಕ, ಮೇಲ್ಸೇತುವೆಗಳು, ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸುವ ಪಣ ತೊಡಲಾಗಿದೆ. ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಜಿಲ್ಲೆಯ 6 ತಾಲೂಕುಗಳಲ್ಲಿ ಅತ್ಯಾಧುನಿಕ ಗುಣಮಟ್ಟದ ಸಿಂಥೆಟಿಕ್  ಟ್ರ್ಯಾಕ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಕುಸ್ತಿ ಮತ್ತು ವಾಲಿಬಾಲ್ ಪಟುಗಳಿಗಾಗಿ ಹಾಸ್ಟೆಲ್‌ಗಳನ್ನು ಈ ವರ್ಷದಿಂದ ಶಿವಮೊಗ್ಗ ನಗರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಇದರಿಂದಾಗಿ ಸ್ಥಳೀಯವಾಗಿ ಯುವ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.

 ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ದೃಢ ಹೆಜ್ಜೆ ಇರಿಸಿದ್ದೇವೆ. ನಮ್ಮ  ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಈಗಾಗಲೇ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ 268 ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 257 ಕಸ ಸಂಗ್ರಹಿಸುವ ಟಿಪ್ಪರ್‌ಗಳನ್ನು ಒದಗಿಸಲಾಗಿದೆ. ಪ್ರಸ್ತುತ ಹಣಕಾಸು ಸಾಲಿನಲ್ಲಿ ಜಿಲ್ಲೆಯಲ್ಲಿ 4409 ಶೌಚಾಲಯಗಳನ್ನು ಪೂರ್ಣಗೊಳಿಸಲಾಗಿದ್ದು, 5.29ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ 104ಕೋಟಿ ರೂ. ವೆಚ್ಚದಲ್ಲಿ  ನಿರಂತರ ಕುಡಿಯುವ ನೀರು ಪೂರೈಸುವ ಕಲ್ಪಿಸುವ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಈಗಾಗಲೇ 32,900 ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದ್ದು, ಶೇ.70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಒಂದು ವರ್ಷದೊಳಗೆ ಶಿವಮೊಗ್ಗ ನಗರದ 55,800 ಮನೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾನಗರಪಾಲಿಕೆ ಹೊರವಲಯದಲ್ಲಿರುವ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸುವ 96.50ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ 2024ರೊಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಳ ಸಂಪರ್ಕ ಮೂಲಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯತತ್ಪರರಾಗಿದ್ದೇವೆ. ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ 334 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 33 ಕಾಮಗಾರಿಗಳು ಪ್ರಗತಿಯಲ್ಲಿವೆ.  ತಮ್ಮೆಲ್ಲರ ಸಹಕಾರದಿಂದಾಗಿ ವಿಶೇಷವಾಗಿ ಜಿಲ್ಲೆಯಲ್ಲಿ ಕರೋನಾದ ಒಂದು ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದು, ಪ್ರಸ್ತುತ ಮೂರನೇ ಅಲೆಯನ್ನು ಎದುರಿಸಲು ನಮಗೆ ಸಾಧ್ಯವಾಗಿದೆ. ಅದರೊಂದಿಗೆ ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಲಭ್ಯಗಳನ್ನು ಉನ್ನತೀಕರಿಸಲು ವ್ಯಾಪಕ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ.
ಇನ್ನೂ ಕೊರೊನಾ ಮಹಾಮಾರಿ ದೂರವಾಗಿಲ್ಲ. ಆದ್ದರಿಂದ ಸರ್ಕಾರದ ನಿಯಮಗಳನ್ನು  ಚಾಚುತಪ್ಪದೇ ಪಾಲಿಸುತ್ತಾ ಸುರಕ್ಷಿತವಾಗಿರೋಣ ಎಂದು  ಸಚಿವ ನಾರಾಯಣಗೌಡ ಅವರು ಕರೆ ನೀಡಿದರು. 

ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು. 

ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡ, ಡಿಎಸ್ ಅರುಣ್, KSSIDC ಉಪಾಧ್ಯಕ್ಷ ಎಸ್ ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.