ಶಿವಮೊಗ್ಗ: ಜಿಲ್ಲಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ

ಶಿವಮೊಗ್ಗ: ಜಿಲ್ಲಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಿದ್ದು, ಶಾಂತಿಯುತವಾಗಿ ನಡೆಯುತ್ತಿದೆ. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಯಾವ ಕಹಿ ಘಟನೆಗಳೂ ಇದುವರೆಗೂ ವರದಿಯಾಗಿಲ್ಲ. 
ಇಂದಿನಿಂದ ಏ.11 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಸಂಪೂರ್ಣ ಪರೀಕ್ಷೆ ನಡೆದಿರಲಿಲ್ಲ. ಈಗ ಕೋವಿಡ್ ಮತ್ತು ಹಿಜಾಬ್ ಗೊಂದಲದ ನಡುವೆಯೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭಗೊಂಡಿದೆ.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ. ರಮೇಶ್, ಜಿಲ್ಲೆಯಲ್ಲಿ 94 ಪರೀಕ್ಷಾ ಕೇಂದ್ರಗಳಿವೆ. 24287 ಮಕ್ಕಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಸುಗಮವಾಗಿ ನಡೆಯಲು 35 ಮಾರ್ಗಾಧಿಕಾರಿಗಳು, 94 ಮಂದಿ ಸ್ಥಾನಿಕ ಜಾಗೃತದಳದ ಅಧಿಕಾರಿಗಳು, 94 ಸ್ವಾಧೀನಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಕೋವಿಡ್ ಮಾರ್ಗಸೂಚಿಯ ಅನುಸಾರ ಪರೀಕ್ಷಾ ಕೇಂದ್ರಗಳಲ್ಲಿ ಅಂತರ ಕಾಯ್ದುಕೊಳ್ಳಲು ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್ ಮಾಡುವಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಕಸ್ಮಿಕವಾಗಿ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದರೆ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಹಿಜಾಬ್ ಪ್ರಕರಣಗಳಿಲ್ಲ:
ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಮಾತ್ರ ಪರೀಕ್ಷೆ ಬರೆಯುವುದಿಲ್ಲವೆಂದು ವಾಪಾಸ್ ಹೋಗಿದ್ದರು. ಆದರೆ, ಆಕೆ ಮತ್ತೆ ವಾಪಾಸ್ ಬಂದು ಪರೀಕ್ಷೆ ಬರೆದಿದ್ದಾಳೆ. ಹಾಗಾಗಿ ಜಿಲ್ಲೆಯಲ್ಲಿ ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಯಾವ ಗೊಂದಲವೂ ಇಲ್ಲದೇ ಶಾಂತಿಯುತವಾಗಿ ಜಿಲ್ಲಾದ್ಯಂತ ಪರೀಕ್ಷೆ ಆರಂಭವಾಗಿದೆ ಎಂದು ಎನ್.ಎಂ. ರಮೇಶ್ ತಿಳಿಸಿದ್ದಾರೆ.
ಜೇನು ಕಡಿತ:
ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಜೇನು ಕಡಿದ ಘಟನೆ ವರದಿಯಾಗಿದೆ. ಇಲ್ಲಿನ ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಜೇನು ಕಡಿದಿದೆ. ಜೇನು ಕಡಿದ ವಿದ್ಯಾರ್ಥಿಗಳಿಗೆ ತಕ್ಷಣವೇ ವೈದ್ಯರನ್ನು ಕರೆಯಿಸಿ ಚಿಕಿತ್ಸೆಯನ್ನು ನೀಡಲಾಗಿದೆ. ಅಲ್ಲದೆ ಅವರಿಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯವನ್ನು ಕೂಡ ನೀಡಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಆತಂಕ ಪಡುವುದು ಬೇಕಾಗಿಲ್ಲ. ಒಂದು ಗಂಟೆ ಬೇಕಾದರೂ ಹೆಚ್ಚವರಿಯಾಗಿ ಸಮಯ ತೆಗೆದುಕೊಳ್ಳಬಹುದು ಎಂದು ಎನ್.ಎಂ. ರಮೇಶ್ ತಿಳಿಸಿದ್ದಾರೆ. 
ಅಲ್ಲದೆ, ಘಟನಾ ಸ್ಥಳಕ್ಕೆ ಜಿ.ಪಂ. ಇಸಿಓ ಎಂ.ಎಲ್. ವೈಶಾಲಿ ಭೇಟಿ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಆ ಕೇಂದ್ರಕ್ಕೆ ಆಂಬುಲೆನ್ಸ್ ಕೂಡ ಕಳುಹಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಇಬ್ಬರು ಪೋಷಕರಿಗೂ ಜೇನು ಕಡಿದಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.