ಬಾಲಕಾರ್ಮಿಕರ ಪತ್ತೆ ತಪಾಸಣೆ ನಿರಂತರ ಮಾಡಬೇಕು: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಜಿಲ್ಲೆಯಲ್ಲಿ 7ಬಾಲಕಾರ್ಮಿಕರ ಪತ್ತೆ
ಶಿವಮೊಗ್ಗ, ಎ.13: ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ನಿರಂತರ ತಪಾಸಣಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಜಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿರನ್ನು ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ. ಅಡಿಕೆ ತೋಟಗಳು, ಇಟ್ಟಿಗೆ ಭಟ್ಟಿಗಳು, ಪೌಲ್ಟ್ರಿ ಫಾರ್ಮ್‍ಗಳು, ಮಂಡಕ್ಕಿ ಭಟ್ಟಿಗಳು ಸೇರಿದಂತೆ ಎಲ್ಲಾ ಕಡೆಗಳಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿ ವರದಿಯನ್ನು ಸಲ್ಲಿಸಬೇಕು. ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಇಲ್ಲದಿರುವುದರ ಬಗ್ಗೆ ಪಿಡಿಒಗಳು ಮತ್ತು ಸ್ಥಳೀಯ ಸಂಸ್ಥೆ ಅಧಿಕಾರಿಗಳು ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‍ಗಳು ಸಹ ತಪಾಸಣಾ ಕಾರ್ಯ ನಡೆಸಿ ಬಾಲಕಾರ್ಮಿಕರು ಕಂಡು ಬಂದಲ್ಲಿ ಮಾಲಿಕರ ವಿರುದ್ಧ ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಹೇಳಿದರು.

ಕಳೆದ ವರ್ಷ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು 638 ದಿಢೀರ್ ತಪಾಸಣೆ ಕೈಗೊಳ್ಳಲಾಗಿದ್ದು, 7ಪ್ರಕರಣಗಳಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಿ ಎಫ್‍ಐಆರ್ ದಾಖಲಿಸಲಾಗಿದೆ. ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕರ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ 58 ಅಪಾಯಕಾರಿ ಉದ್ದಿಮೆಗಳು ಹಾಗೂ 11262 ಅಪಾಯಕಾರಿಯಲ್ಲದ ಉದ್ದಿಮೆಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಕಡೆ ಬಾಲಕಾರ್ಮಿಕರನ್ನು ತೊಡಗಿಸಲಾಗಿದೆಯೇ ಎಂದು ತಪಾಸಣೆ ಮಾಡಲಾಗಿದೆ ಎಂದು ಬಾಲಕಾರ್ಮಿಕ ಯೋಜನಾಧಿಕಾರಿ ರಘನಾಥ್ ಅವರು ಮಾಹಿತಿ ನೀಡಿದರು.

ದೂರು ನೀಡಿ: ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲಕಾರ್ಮಿಕರು ಕಂಡು ಬಂದಲ್ಲಿ ಸಾರ್ವಜನಿಕರು 1098 ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಬಾಲಕಾರ್ಮಿಕ ಪದ್ಧತಿಯಿಂದಾಗಿ ಅಂತಹ ಮಕ್ಕಳ ಶೋಷಣೆ, ಲೈಂಗಿಕ ಕಿರುಕುಳ, ಕ್ರಿಮಿನಲ್ ಕೃತ್ಯಗಳಿಗೆ ದಾರಿಯಾಗುತ್ತದೆ. ಬಾಲಕಾರ್ಮಿಕರನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಬಾಲಕಾರ್ಮಿಕ ಜಾಗೃತಿ ಭಿತ್ತಿಪತ್ರಿಕೆಯನ್ನು ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳ್ಳಿ, ಜಿಲ್ಲಾ ಕಾರ್ಮಿಕ ಕಲ್ಯಾಣಾಧಿಕಾರಿ ಸೀಬಿ ರಂಗಯ್ಯ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ತಹಶೀಲ್ದಾರ್‍ಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.