ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ SDPI ವಿನೂತನ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದಿನನಿತ್ಯ ಅಗತ್ಯ ವಸ್ತು, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ನಗರ ಸಮಿತಿಯ ವತಿಯಿಂದ ಇಂದು ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಚಟ್ಟದ ಮೇಲೆ ಸಿಲಿಂಡರ್ ಇಟ್ಟುಕೊಂಡು ಹಾಗೂ ವಾಹನಗಳನ್ನು ದಬ್ಬಿಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು.
 ನಿತ್ಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್, ದವಸ ಧಾನ್ಯ, ಅಡುಗೆ ಅನಿಲ, ಅಡುಗೆ ಎಣ್ಣೆ, ಸಿಮೆಂಟ್, ಕಬ್ಬಿಣ ಹಾಗೂ ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜನತೆ ನಿರುದ್ಯೋಗದಿಂದ ಬಳಲುತ್ತಿದ್ದಾರೆ, ರೈತರಿಗೆ ಪರಿಹಾರವಿಲ್ಲದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಸಂದರ್ಭದಲ್ಲಿ ಸರ್ಕಾರಗಳು ಈ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದರ ಬದಲಾಗಿ ಕೋಮು ಪ್ರಚೋದನಕಾರಿ ಭಾಷಣ ಮಾಡಿಕೊಂಡು ಮಾಧ್ಯಮಗಳಲ್ಲಿ ಮಿಂಚುವ ನಶೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಇಂಧನಗಳ ಪೆಟ್ರೋಲ್ ಡೀಸೆಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿದ್ದಾರೆ. ಸಂಘಪರಿವಾರದ ಅಜೆಂಡಾಗಳನ್ನು ಜಾರಿಗೊಳಿಸಲು ಮುಂದಾಗಿರುವ ಬಿಜೆಪಿ ಸರ್ಕಾರ, ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿಹಾಕುವ ಸಲುವಾಗಿ ಕೋಮು ದ್ವೇಷ ಹರಡಿಸಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಿ ಬಚಾವ್ ಆಗಲು ಪ್ರಯತ್ನಿಸುತ್ತಿದೆ ಎಂದು ದೂರಿದರು.
ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರದ ಮಂತ್ರಿಗಳು ಹಾಗೂ ಶಾಸಕರಿಗೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ತನ್ನ ನಾಲಿಗೆಯನ್ನು ಹರಿಬಿಡುತ್ತಿದ್ದಾರೆ. ಜನರ ಸೇವೆಗಾಗಿ ಚುನಾವಣೆಯಲ್ಲಿ ಮತ ಪಡೆದ ಬಿಜೆಪಿ ಸರ್ಕಾರ ರಚಿಸಲು ಆಗದೆ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಸರ್ಕಾರ ನಡೆಸುತ್ತಿರುವುದು ಕೇವಲ ಕರ್ನಾಟಕ ರಾಜ್ಯದಲ್ಲಿ ಅಲ್ಲ ಬದಲಾಗಿ ಬಹುತೇಕ ರಾಜ್ಯಗಳಲ್ಲಿ ಇದೇ ಕುದುರೆ ವ್ಯಾಪಾರ ನಡೆಸಿ ಆಡಳಿತ ಮಾಡುತ್ತಿದೆ ಎಂದು ಆರೋಪಿಸಿದರು.
ಬೆಲೆ ಏರಿಕೆಯ ಜನವಿರೋಧಿ ನೀತಿಯನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಜನಸಾಮಾನ್ಯರಿಗೆ ಜೊತೆಗೂಡಿಸಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿ ಬೀದಿಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಸ್ಡಿಪಿಐ ನಗರಾಧ್ಯಕ್ಷ ಆಸಿಫ್ ಆಹ್ಮದ್, ಉಪಾಧ್ಯಕ್ಷ ಸಾದಿಖ್ ಖಾನ್, ಕಾರ್ಯದರ್ಶಿ ಅಬ್ದುಲ್ ರಹೀಂ, ಸದಸ್ಯರುಗಳಾದ ಮುಜೀಬುರಹ್ಮಾನ್, ಹಬೀಬ್ ಪಾಶ ಉಬೇದುಲ್ಲಾ, ಅಹ್ಮದ್ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.