ಅರಣ್ಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು: ಎಸ್.ರುದ್ರೇಗೌಡ

ಶಿವಮೊಗ್ಗ, ಜೂ.05: ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಅವರು ಕರೆ ನೀಡಿದರು.

ಅವರು ಭಾನುವಾರ ಅರಣ್ಯ ಇಲಾಖೆ ವತಿಯಿಂದ ಆಯನೂರು ವಲಯದ ಕೆಂಪಿನಕೊಪ್ಪದಲ್ಲಿ ಆಯೋಜಿಸಲಾಗಿದ್ದ ಬಿತ್ತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎದೆಗೆ ಬಿದ್ದ ಅಕ್ಷರ, ಭೂಮಿಗೆ ಬಿದ್ದ ಬೀಜ ಉತ್ತಮ ಫಲವನ್ನೇ ನೀಡುವುದು. ಸಾಲು ಮರದ ತಿಮ್ಮಕ್ಕನಂತಹವರು ತಮ್ಮ ಇಳಿವಯಸ್ಸಿನಲ್ಲಿ ವೃಕ್ಷ ರಕ್ಷಣೆಗೆ ಜೀವನವನ್ನು ಮುಡಿಪಾಗಿಟ್ಟಿರುವುದು ನಮಗೆಲ್ಲರಿಗೂ ಮಾದರಿಯಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮಾತನಾಡಿ, ಮಕ್ಕಳು ಪರಿಸರ, ಅರಣ್ಯದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಗಿಡವನ್ನು ನೆಡಲು ನಮ್ಮಿಂದ ಸಾಧ್ಯವಾಗದಿದ್ದರೂ, ಮರವನ್ನು ಕಡಿಯುವ ಕೃತ್ಯಕ್ಕೆ ಯಾರೂ ಕೈ ಹಾಕಬಾರದು. ಪರಿಸರದಲ್ಲಿರುವ ಹಕ್ಕಿಗಳು, ಸುತ್ತಮುತ್ತಲಿನ ಮರಗಿಡಗಳ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡಬೇಕು. ಸಸಿಗಳನ್ನು ನೆಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು.
 
ಕೆಂಪಿನಕೊಪ್ಪ ಅರಣ್ಯ ವಲಯದಲ್ಲಿ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು, ಗಣ್ಯರು ಈ ಸಂದರ್ಭದಲ್ಲಿ ಬೀಜಗಳನ್ನು ಬಿತ್ತನೆ ಮಾಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಯು.ಶಂಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು.
************

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.