ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜನೆ; ಯೂನಿಯನ್ ಅಧ್ಯಕ್ಷ ಕೆ.ಎಲ್. ಜಗದೀಶ್ವರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಯೂನಿಯನ್ ಅಧ್ಯಕ್ಷ ಕೆ.ಎಲ್. ಜಗದೀಶ್ವರ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜುಲೈ 18 ರಂದು ಶಿಕಾರಿಪುರದ ಅ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಶಿಕಾರಿಪುರ ತಾಲೂಕಿನಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜುಲೈ 26 ರಂದು ಶಿವಮೊಗ್ಗದ ಡಾ. ಕುರಿಯನ್ ಸಭಾಂಗಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಜಿಲ್ಲೆಯ ಚುನಾವಣೆ ಜರುಗುವ ಸಹಕಾರ ಸಂಘಗಳ ರಿಟರ್ನಿಂಗ್ ಅಧಿಕಾರಿಗಳು ಮತ್ತು ಕಾರ್ಯನಿರ್ವಾಹಕರುಗಳಿಗೆ ಒಂದು ದಿನದ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದರು.   
ಆಗಸ್ಟ್ 4 ರಂದು(ಸ್ಥಳ ನಿಗದಿಯಾಗಿಲ್ಲ) ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಇವರ ಆಶ್ರಯದಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯ ನಿರ್ವಾಹಕರುಗಳಿಗೆ ಒಂದು ದಿನದ ಜಿಲ್ಲಾ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಸಹಕಾರ ಯೂನಿಯನ್ ಈ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, 3 ತರಬೇತಿ ಶಿಬಿರಗಳಿಗೆ ಸಹಕಾರ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳಾದ ಶೇಖರಪ್ಪ, ಶಿವಾನಂದಪ್ಪ ಮುಂತಾದವರು ಭಾಗವಹಿಸಲಿದ್ದಾರೆ. ಸಹಕಾರ ಯೂನಿಯನ್ ಕಾಲಕಾಲಕ್ಕೆ ರಾಜ್ಯಮಟ್ಟದ ತರಬೇತಿ ಶಿಬಿರಗಳನ್ನು ಕೂಡ ಆಯೋಜಿಸುತ್ತಾ ಬರುತ್ತಿದೆ. ಸಹಕಾರ ವಿಷಯ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆಯನ್ನು ನಡೆಸಲಾಗುತ್ತದೆ. ಸಹಕಾರ ಸಂಘಗಳ ಮಾತೃ ಸಂಸ್ಥೆಯಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎಸ್.ಕೆ. ಮರಿಯಪ್ಪ, ಸಂಜೀವ್ ಕುಮಾರ್, ಜಯರಾಂ, ಶಶಿರೇಖಾ, ಮ್ಯಾನೇಜರ್ ಹನುಮಂತಪ್ಪ ಇದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.