ಶಿವಮೊಗ್ಗದಲ್ಲಿ ನೂತನ ಕಚೇರಿ ಖನಿಜ ಭವನ ಉದ್ಘಾಟನೆ
ಶಿವಮೊಗ್ಗ, ನ.೦1: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೂತನ ಕಚೇರಿ ಖನಿಜ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ ಅವರು ಮಂಗಳವಾರ ಉದ್ಘಾಟಿಸಿದರು.ನಗರದ ಕುವೆಂಪು ನಗರದಲ್ಲಿ 1.14 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಹಲವು ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಮೂಲಸೌಕರ್ಯಗಳನ್ನು ಒದಗಿಸುವ ಕಾಮಗಾರಿಗಳು ಬಹುತೇಕ ಅಂತಿಮ ಹಂತದಲ್ಲಿವೆ. ಜಿಲ್ಲೆಯ ಅಭಿವೃದ್ಧಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪಾತ್ರ ಪ್ರಮುಖವಾಗಿದ್ದು, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಯ ಜವಾಬ್ದಾರಿ ಇಲಾಖೆಯ ಮೇಲಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅಗತ್ಯ ಮೂಲಸೌಕರ್ಯಗಳ ನಿರ್ಮಾಣ ಕಾರ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬಹು ದೊಡ್ಡ ಪಾತ್ರ ಹೊಂದಿದೆ. ಇಲಾಖೆಯಿಂದ ಸಾರ್ವಜನಿಕರಿಗೆ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಇನ್ನಷ್ಟು ಸೇವೆ ದೊರಕಲಿ ಎಂದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಉಪಸ್ಥಿತರಿದ್ದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ಮಹಾಂತೇಶ್ ಅವರು ಸ್ವಾಗತಿಸಿದರು. ಹಿರಿಯ ಭೂ ವಿಜ್ಞಾನಿ ವಿಂಧ್ಯಾ ಅವರು ವಂದಿಸಿದರು.

Leave a Comment