*ಮಾ.09 ರಿಂದ ದ್ವಿತೀಯ ಪಿಯು ಪರೀಕ್ಷೆ : ಸಕಲ ಸಿದ್ದತೆ*

ಶಿವಮೊಗ್ಗ, ಮಾರ್ಚ್ 04:
ಜಿಲ್ಲೆಯಲ್ಲಿ ಮಾರ್ಚ್ 09 ರಿಂದ 29 ರವರೆಗೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ತಿಳಿಸಿದರು.
     ಮಾ.03 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
    ಪರೀಕ್ಷೆಗೆ ಒಟ್ಟು 18,970 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. 16711 ರೆಗ್ಯುಲರ್ ವಿದ್ಯಾರ್ಥಿಗಳು, 1451 ರಿಪೀಟರ್ ಮತ್ತು 808 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಶಿವಮೊಗ್ಗ 13, ಭದ್ರಾವತಿ 06, ತೀರ್ಥಹಳ್ಳಿ 03, ಹೊಸನಗರ 03, ಸಾಗರ 05, ಶಿಕಾರಿಪುರ 04 ಮತ್ತು ಸೊರಬ 02 ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು.
    ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ತ್ರಿಸದಸ್ಯ ಸಮಿತಿ ನೇಮಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತ್ ನೀಡುವ ಬಗ್ಗೆ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
     ಪರೀಕ್ಷೆ ಕರ್ತವ್ಯಕ್ಕೆ ಸಂಬಂಧಿಸಿದ ಮಾರ್ಗಾಧಿಕಾರಿಗಳು, ಪರಿವೀಕ್ಷಕರು ಹಾಗೂ ಇನ್ನಿತರೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಯಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಈಗಲೇ ಆಸನಗಳು, ಮೂಲಭೂತ ಸೌಕರ್ಯಗಳ ಕುರಿತು ಪರೀಕ್ಷಾ ಕೇಂದ್ರಗಳಿಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮೆಸ್ಕಾಂ ಇಲಾಖೆ ನಿಗಾ ವಹಿಸಬೇಕು.ಹಾಗೂ ಯಾವುದೇ ಗೊಂದಲಗಳಿಗೆ ಎಡೆಮಾಡದೆ, ವ್ಯವಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡು, ಸಿದ್ದವಾಗಿರುವಂತೆ ಸೂಚನೆ ನೀಡಿದರು.
     ಡಿಡಿಪಿಯು ಬಿ.ಕೃಷ್ಣಪ್ಪ, ಪರೀಕ್ಷಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಪರೀಕ್ಷೆಯ ಅಧಿಕಾರಿಗಳು ಹಾಜರಿದ್ದರು.
(ಫೋಟೊ ಇದೆ)

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.