ಮೇ7ರ ನಾಳೆ ಆಯನೂರಿನಲ್ಲಿ ಮೋದಿ ಚುನಾವಣಾ ಪ್ರಚಾರ: ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ
ಯಡೇಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯದಲ್ಲಿ ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ್ ಮಾತನಾಡಿ, ಮೇ 7ರ ಭಾನುವಾರ ನನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಆಯನೂರು ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಪ್ರತಿ ಬೂತ್‌ಗಳಿಂದಲೂ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕು. ಮೂರು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಮತದಾರರು ಭಾಗವಹಿಸುವ ನೀರಿಕ್ಷೆಯಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಜನಬೆಂಬಲ ವ್ಯಕ್ತವಾಗುತ್ತಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿಯು ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ನೀರಿಕ್ಷೆಯಿದೆ. ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪ ನಾವೆಲ್ಲರೂ ಮಾಡಬೇಕು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ಮಾರ್ಗದರ್ಶನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಒಂದೇ ಅವಧಿಯಲ್ಲಿ ಕೋಟ್ಯಾಂತರ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳು ಆಗಿವೆ. ರಸ್ತೆ ನಿರ್ಮಾಣ, ಮೂಲಸೌಕರ್ಯ ಸೇರಿದಂತೆ ಜನಪರ ಕೆಲಸಗಳನ್ನು ಮಾಡಲಾಗಿದೆ. ಉತ್ತಮ ಸ್ಪಂದನೆ ಕ್ಷೇತ್ರದಲ್ಲಿದೆ ಎಂದು ತಿಳಿಸಿದರು.
ಮಲ್ಲಾಪುರ, ಯಡೇಹಳ್ಳಿ, ಅಗರದಹಳ್ಳಿ, ಮೈದೊಳಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಆನವೇರ, ಹಸೂಡಿ ಹಾಗೂ ಶ್ರೀ ಚನ್ನಬಸವೇಶ್ವರ ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಪ್ರಚಾರ ನಡೆಸಿದರು. ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡರು.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಗ್ರಾಮಾಂತರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ವಿವಿಧ ಸಮಿತಿ ಮುಖಂಡರು ಕಾರ್ಯಾಲಯದಲ್ಲಿ ಸಭೆ ನಡೆಸಿದರು.
ಪ್ರಚಾರ ಕಾರ್ಯದಲ್ಲಿ ಶಿವಮೊಗ್ಗ ಗ್ರಾಮಾಂತರ ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಗ್ರಾಮಾಂತರ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಆನಂದ್, ಮಹಾಶಕ್ತಿ ಕೇಂದ್ರದ ಪ್ರಮುಖರು, ನೂರಾರು ಕಾರ್ಯಕರ್ತರು ಹಾಜರಿದ್ದರು.
Leave a Comment