*ದ್ವಿತೀಯ ಪಿಯು ಪೂರಕ ಹಾಗೂ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸಲು ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ*
ಶಿವಮೊಗ್ಗ, ಮೇ.18 : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋಸ್ರ್ಗ ಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ 23ರಿಂದ ಜೂನ್ 3ರವರೆಗೆ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 3312 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಶಿವಮೊಗ್ಗದಲ್ಲಿ ಎರಡು ಹಾಗೂ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ ಮತ್ತು ಸೊರಬದಲ್ಲಿ ತಲಾ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಒಟ್ಟು 6 ಮಾರ್ಗಗಳನ್ನು ಗುರುತಿಸಲಾಗಿದೆ.
ಪ್ರಶ್ನೆ ಪತ್ರಿಕೆಗಳನ್ನು ಸಾಗಾಟ ಮಾಡಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಾಗಾಟ ವಾಹನಕ್ಕೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸಬೇಕು. ಈ ವಾಹನಕ್ಕೆ ಜಿಪಿಎಸ್ ಅಳವಡಿಸಿ ನಿಗಾ ವಹಿಸಲು ವ್ಯವಸ್ಥೆ ಮಾಡಬೇಕು. ಇದೇ ರೀತಿ ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಬಂದೋಬಸ್ತು ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯ ಅಧೀಕ್ಷಕರು ಹಾಗೂ ಉತ್ತರ ಪತ್ರಿಕೆ ಪಾಲಕರನ್ನು ಈಗಾಗಲೇ ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಅವರು ಹೇಳಿದರು.
ಪರೀಕ್ಷಾ ಸಮಯದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳನ್ನು ಸರಿಯಾಗಿ ಸ್ಯಾನಿಟೈಸ್ ಮಾಡಲು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕು. ಖಜಾನೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಠೇವಣಿ ಇರಿಸುವ ಹಾಗೂ ವಿತರಿಸುವ ಪ್ರಕ್ರಿಯೆ ನಡೆಯುವ ಸ್ಥಳದಲ್ಲಿ 24ಗಂಟೆ ಕಾಲ ಸಿಸಿಟಿವಿ ವ್ಯವಸ್ಥೆಯನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.
ಸಿಇಟಿ ಪರೀಕ್ಷೆ:2023ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ ಮುಂತಾದ ವೃತ್ತಿಪರ ಕೋಸ್ರ್ಗಳ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 20 ಮತ್ತು 21ರಂದು ನಡೆಯಲಿದೆ. ಪರೀಕ್ಷೆ ಬೆಳಿಗ್ಗೆ 10.30ರಿಂದ 11.50ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 3.50ರವರೆಗೆ ನಡೆಯಲಿದೆ. ಶಿವಮೊಗ್ಗ, ಭದ್ರಾವತಿ ಮತ್ತು ಸಾಗರ ತಾಲೂಕಿನಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಸುಸೂತ್ರವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಅನಿಲ್‍ಕುಮಾರ್ ಭೂಮರಡ್ಡಿ ಸೇರಿದಂತೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
-----------------
Leave a Comment