ಮಾರ್ಚ್ 04 ಮತ್ತು 05 ರಂದು ಜಿಲ್ಲಾಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ
ಶಿವಮೊಗ್ಗ: 2023-24ನೇ ಸಾಲಿನ ಶಿವಮೊಗ್ಗ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 04 ಮತ್ತು 05ನೇ 2024ರ ಸೋಮವಾರ ಮತ್ತು ಮಂಗಳವಾರ ಎರಡು ದಿನಗಳು ಶಿವಮೊಗ್ಗದ ನೆಹರು ಕ್ರೀಡಾಂಗಣ, ಸರ್ಕಾರಿ ನೌಕರರ ಭವನ ಮತ್ತು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿಯವರು ಹೇಳಿದರು.
ಇಂದು ಶಿವಮೊಗ್ಗ ಜಿಲ್ಲಾ ಶಾಖೆಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ರಾಜ್ಯ ಸರ್ಕಾರದ ಖಾಯಂ ಸರ್ಕಾರಿ ನೌಕರರು ದಿನಾಂಕ: 04-03-2024ರ ಬೆಳಗ್ಗೆ ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳುವುದು. ಈ ಕ್ರೀಡಾಕೂಟದ ಉದ್ಘಾಟನೆಯನ್ನು ಸನ್ಮಾನ್ಯ ಜಿಲ್ಲಾ ಉಸ್ತುವಾರಿ ಶ್ರೀ ಸಚಿವರು ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಮಧು ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಶಾಸಕರಾದ ಶ್ರೀ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಲಿದ್ದು, ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರರವರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಈ ಬಾರಿಯ ಕ್ರೀಡಾಕೂಟದಲ್ಲಿ ಖೋ ಖೋ ಮತ್ತು ಯೋಗ ಸ್ಪರ್ಧೆಗಳನ್ನು ಸೇರ್ಪಡೆಗೊಳಿಸಲಾಗಿದ್ದು, ನೌಕರರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಜಿಲ್ಲೆಯ ಸರ್ಕಾರಿ ನೌಕರರಿಗೆ 2 ದಿನಗಳ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವಿದ್ದು, ಈ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಿ ಯಶಸ್ವಿಗೊಳಿಸಿಕೊಡುವಂತೆ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಾಖೆಯ ಪಧಾದಿಕಾರಿಗಳು ಉಪಸ್ಥಿತರಿದ್ದರು.

Leave a Comment