ಹಿರಿಯೂರು ಬಳಿ ಭೀಕರ ಅಪಘಾತ: ಪ್ರವಾಸಿ ಬಸ್ ಪಲ್ಟಿ, ಇಬ್ಬರು ಸಾವು

ಚಿತ್ರದುರ್ಗ: ಗೋವಾದಿಂದ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ.
ಆ.21ರ ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಅರಿಕೆರೆ ಬಳಿಯ ಖಾಸಗಿ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 53 ವಿದ್ಯಾರ್ಥಿನಿಯರು ಆಗಸ್ಟ್ 16ರಂದು ಐಲ್ಯಾಂಡ್ ಬಸ್‌ನಲ್ಲಿ ಗೋವಾ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಐಮಂಗಲ ಬಳಿ ಈ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಟ್ರೆಂಚ್‌ಗೆ ಬಿದ್ದು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ.
ಚಾಲಕ ನಿದ್ದೆ ಮಂಪರಿನಲ್ಲಿದ್ದ ವೇಳೆ ನಿಯಂತ್ರಣ ತಪ್ಪಿರಬಹುದು ಎಂದು ಶಂಕಿಸಲಾಗಿದೆ. ಅಪಘಾತದಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ನರ್ಸಿಂಗ್ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ. ಒಟ್ಟು 20 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಕುರಿತು ಐಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಹಲೋ ಶಿವಮೊಗ್ಗ – ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ನಮ್ಮ ಚಾನೆಲ್ Subscribe ಮಾಡಿ, Like ಮತ್ತು Share ಮಾಡಲು ಮರೆಯಬೇಡಿ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.