ರಸ್ತೆ ಹಾಳಾಗಿದೆ: ಕೆಸರು ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ

ಸಾಗರ: ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಕೊಪ್ಪ–ಮೂರುಕೈ ನಡುವಿನ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿರುವುದನ್ನು ಖಂಡಿಸಿ ಗ್ರಾಮಸ್ಥರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಮಂಗಳವಾರ ಗ್ರಾಮಸ್ಥರು, ಮಹಿಳೆಯರು ಹಾಗೂ ಮಕ್ಕಳು ರಸ್ತೆಗಿಳಿದು, ಕೆಸರು ತುಂಬಿದ ಹೊಂಡಗುಂಡಿಗಳಲ್ಲೇ ಭತ್ತದ ಸಸಿಗಳನ್ನು ನಾಟಿ ಮಾಡುವ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದರು.

ಅವರೆಕೊಪ್ಪ–ಮೂರುಕೈ ರಸ್ತೆ ಹಲವು ವರ್ಷಗಳಿಂದ ಅವ್ಯವಸ್ಥೆಯಿಂದ ಕೂಡಿದ್ದು, ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬೇಸಿಗೆಯಲ್ಲಿ ರಸ್ತೆಯಲ್ಲಿ ವಿಪರೀತ ಧೂಳು ಹಾಗೂ ದೊಡ್ಡ ದೊಡ್ಡ ಹೊಂಡಗುಂಡಿಗಳಿಂದ ಸಂಚಾರ ಕಷ್ಟವಾಗುತ್ತದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರುಗದ್ದೆಯಾಗಿ ಮಾರ್ಪಡುತ್ತದೆ. ಶಾಲೆಗೆ ತೆರಳುವ ಮಕ್ಕಳು ಕೆಸರಿನಲ್ಲಿ ಬಿದ್ದು, ಯೂನಿಫಾರಂ ಮಣ್ಣಾಗಿಸಿಕೊಂಡು ಮನೆಗೆ ವಾಪಸ್ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ದ್ವಿಚಕ್ರ ವಾಹನ ಸವಾರರು ರಸ್ತೆಯ ಹೊಂಡಗಳಲ್ಲಿ ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ. ತುರ್ತು ಸಂದರ್ಭದಲ್ಲಿ ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಕೂಡ ಈ ರಸ್ತೆಯಿಂದ ಸಾಧ್ಯವಾಗದಷ್ಟು ಪರಿಸ್ಥಿತಿ ಹದಗೆಟ್ಟಿದೆ ಎಂದು ಗ್ರಾಮಸ್ಥರು ದೂರಿದರು.

ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಭಾಷ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಅಶೋಕ್, ಪ್ರದೀಪ್, ಯತೀಶ್, ದೀಪು, ಗಣೇಶ್, ವಿನಯ ಶೇಖರ್, ಹರೀಶ್, ಭಾರತಿ, ಚೌಡಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.