ಭದ್ರಾ ಅಚ್ಚುಕಟ್ಟು ನೀರಾವರಿ ಕುರಿತು ಮಹತ್ವದ ಸಭೆ: ರೈತರ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ವಿಚಾರವಾಗಿ ಶಿವಮೊಗ್ಗದಲ್ಲಿ ಮಹತ್ವದ ಸಭೆ ನಡೆಯಿತು. ಶಾಲಾ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೀರಿನ ಸಮರ್ಪಕ ನಿರ್ವಹಣೆ ಹಾಗೂ ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಬಸವಂತಪ್ಪ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಂಜುಮನ್, ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳು, 30ಕ್ಕೂ ಹೆಚ್ಚು ತಾಲೂಕುಗಳ ಶಾಸಕರು, ರೈತ ಮುಖಂಡರು ಹಾಗೂ ಕೃಷಿಕ ಸಮಾಜದ ಪ್ರತಿನಿಧಿಗಳು ಭಾಗವಹಿಸಿದ್ದರು.
ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಈ ವರ್ಷ ನೀರು ಹರಿಸುವುದು, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ನೀರು ಒದಗಿಸುವುದು ಹಾಗೂ ನೀರಿನ ಸಮರ್ಪಕ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಹದೇವಪ್ಪ, ದಾವಣಗೆರೆ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಣ್ಣ, ಶಿಕಾರಿಪುರ ಕೃಷಿಕ ಸಮಾಜದ ನಿರ್ದೇಶಕ ಡಿ.ಡಿ. ಶಿವಕುಮಾರ್ ಸೇರಿದಂತೆ ಹಲವು ರೈತ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯ ಹಾಗೂ ರೈತರ ಸಮಸ್ಯೆಗಳನ್ನು ಮಂಡಿಸಿದರು.
ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೀರಿನ ಬಳಕೆ ಹಾಗೂ ಹಂಚಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯ ನಂತರ, ನೀರಾವರಿ ಸಚಿವರು ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಮತ್ತಷ್ಟು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ನಿರ್ಣಯಿಸಲಾಗಿದೆ ಎಂದು ತಿಳಿಸಲಾಯಿತು.
ಭದ್ರಾ ಜಲಾಶಯದ ನೀರು ಶಿವಮೊಗ್ಗ ಸೇರಿದಂತೆ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯಗಳಿಗೆ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ, ಈ ಸಭೆಯ ನಿರ್ಣಯ ರೈತರಲ್ಲಿ ಕುತೂಹಲ ಮೂಡಿಸಿದೆ.

Leave a Comment