ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಅನಿರ್ದಿಷ್ಟಾವಧಿ ಪ್ರತಿಭಟನೆ: ಜಿಲ್ಲಾಧ್ಯಕ್ಷ ಜಗದೀಶ್ ಎಚ್ಚರಿಕೆ
ಶಿವಮೊಗ್ಗ: ಸಚಿವ ನಾಗೇಂದ್ರ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದರೂ ಅವರನ್ನು ಮರಳಿ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ನೈತಿಕತೆಯನ್ನು ಪ್ರಶ್ನಿಸಿ, ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಾಗಿದೆ. ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವವರೆಗೆ ಈ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎಚ್ಚರಿಸಿದ್ದಾರೆ.
ನಗರದಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಗದೀಶ್, “ಕಳೆದ ೨೦೨೪ರಲ್ಲಿ ಇದೇ ಸರ್ಕಾರ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡಿತ್ತು. ಆದರೆ, ಈಗ ಯಾವುದೇ ಸ್ಪಷ್ಟ ಕಾರಣ ಅಥವಾ ನೈತಿಕ ಸಮರ್ಥನೆ ನೀಡದೆ ಮತ್ತೆ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದೆ. ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮರಳಿ ಸಚಿವರನ್ನಾಗಿ ಮಾಡುವ ಮೂಲಕ ಸರ್ಕಾರ ಯಾವ ನೈತಿಕ ಹೊಣೆಗಾರಿಕೆ ಪ್ರದರ್ಶಿಸುತ್ತಿದೆ?” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಚಿವರ ವಿರುದ್ಧದ ಆರೋಪಗಳು ಬಗೆಹರಿಯದ ಹಿನ್ನೆಲೆಯಲ್ಲಿ ಈ ಮರುಸೇರ್ಪಡೆಯನ್ನು ಬಿಜೆಪಿ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಲಾಗುವುದು. ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ, ನಾಗೇಂದ್ರ ಅವರನ್ನು ವಜಾಗೊಳಿಸಬೇಕು; ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಆರ್.ಕೆ. ಸಿದ್ದರಾಮಣ್ಣ, ಪ್ರಕೋಷ್ಠಗಳ ಅಧ್ಯಕ್ಷ ದತ್ತಾತ್ರಿ, ನಗರ ಬಿಜೆಪಿ ಅಧ್ಯಕ್ಷ ಮೋಹನ್ ರೆಡ್ಡಿ, ಎಸ್.ಎಸ್. ಜ್ಯೋತಿ ಪ್ರಕಾಶ್, ರಶ್ಮಿ ಶ್ರೀನಿವಾಸ್, ಚಂದ್ರಶೇಖರ್ ಸೇರಿದಂತೆ ಹಲವು ನಾಯಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಸಚಿವ ನಾಗೇಂದ್ರ ಅವರ ಮರುಸೇರ್ಪಡೆ ವಿಚಾರವನ್ನು ಬಿಜೆಪಿ ಪ್ರಮುಖ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ಜಿಲ್ಲಾದ್ಯಂತ ಹೋರಾಟದ ಕಾವು ಏರತೊಡಗಿದೆ.

Leave a Comment