ಶಿವಮೊಗ್ಗ: ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ಯಶಸ್ವಿ!19 ಕೇಂದ್ರಗಳಲ್ಲಿ ಪರೀಕ್ಷೆ | 6,359 ಮಂದಿ ಹಾಜರು

19 ಕೇಂದ್ರಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆ: 6,359 ಮಂದಿ ಹಾಜರು
ಶಿವಮೊಗ್ಗ: ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಯಶಸ್ವಿಯಾಗಿ ನಡೆಯಿತು.
ಸೆಪ್ಟೆಂಬರ್ 6ರಂದು ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಒಟ್ಟು 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿತ್ತು. ಶಿವಮೊಗ್ಗ ಜಿಲ್ಲೆಗೆ ನಿಗದಿಪಡಿಸಲಾಗಿದ್ದ 7,651 ಪ್ರಶಿಕ್ಷಣಾರ್ಥಿಗಳ ಪೈಕಿ 6,359 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
ಪರೀಕ್ಷೆ ಯಾವುದೇ ಅಡೆತಡೆಯಿಲ್ಲದೆ ಸುಸೂತ್ರವಾಗಿ ನಡೆಯುವಂತೆ ಜಿಲ್ಲಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕೈಗೊಂಡಿತ್ತು.
ಎಲ್ಲ 19 ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಭದ್ರತೆ ಹಾಗೂ ತಪಾಸಣೆಗೆ 5 ಡಿವೈಎಸ್‌ಪಿ, 19 ಪೊಲೀಸ್ ಇನ್‌ಸ್ಪೆಕ್ಟರ್, 38 ಪಿಎಸ್‌ಐ ಸೇರಿದಂತೆ ಒಟ್ಟು 201 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಭದ್ರತೆಗೆ ಹೆಚ್ಚುವರಿಯಾಗಿ 47 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಪರೀಕ್ಷಾ ಕೇಂದ್ರಗಳಲ್ಲಿ ಗಡಿಯಾರ, ಜಾಮರ್, ಗಾಳಿ-ಬೆಳಕು, ಕುಡಿಯುವ ನೀರು ಹಾಗೂ ಅಗತ್ಯ ಪೀಠೋಪಕರಣ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಖಚಿತಪಡಿಸಿಕೊಳ್ಳಲು ಎಲ್ಲ ಪರೀಕ್ಷಾ ಕೊಠಡಿಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.
ಶಿವಮೊಗ್ಗ ಜಿಲ್ಲೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಯ ಲಿಖಿತ ಪರೀಕ್ಷೆ ಯಶಸ್ವಿಯಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮುಕ್ತಾಯಗೊಂಡಿದೆ.
ಪರೀಕ್ಷೆ ಯಶಸ್ವಿಯಾಗಿ ನಡೆಯಲು ಸಹಕರಿಸಿದ ಎಲ್ಲಾ ಇಲಾಖೆಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಧನ್ಯವಾದ ಸಲ್ಲಿಸಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳಿಗೆ ಶುಭಾಶಯ ಕೋರಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.