ವರದಕ್ಷಿಣೆ ಕಿರುಕುಳ ಪ್ರಕರಣ: ಪತಿ, ಅತ್ತೆಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಶಿವಮೊಗ್ಗ: ವರದಕ್ಷಿಣೆ ಹಣಕ್ಕಾಗಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿ, ಆಕೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಹಾಗೂ ಅತ್ತೆಗೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಆಗುಂಬೆ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಜ್ಯೋತಿ (24) ಅವರಿಗೆ ಪತಿ ದಯಾಂದ್ (37) ಹಾಗೂ ಅತ್ತೆ ಸುಮಿತ್ರ (65) ಅವರು ವರದಕ್ಷಿಣೆ ಹಣಕ್ಕಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಿರುಕುಳದಿಂದ ಬೇಸತ್ತ ಜ್ಯೋತಿ ಅವರು 2021ರ ಮೇ 23ರಂದು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು.
ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 51/2021ರಲ್ಲಿ ವರದಕ್ಷಿಣೆ ಸಾವು ಹಾಗೂ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆಗಿನ ತನಿಖಾಧಿಕಾರಿ ಶಾಂತವೀರ್ ಇ.ಡಿ., ಡಿವೈಎಸ್‌ಪಿ ಅವರು ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಯಶವಂತ ಕುಮಾರ್ ಅವರು ಪತಿ ದಯಾಂದ್ ಹಾಗೂ ಅತ್ತೆ ಸುಮಿತ್ರ ಅವರಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವುದರ ಜೊತೆಗೆ ₹2,24,000 ದಂಡ ಮತ್ತು ₹2 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.