ಅಲ್ಪಸಂಖ್ಯಾತರ ಕಲ್ಯಾಣಕ್ಕೆ 15 ಅಂಶಗಳ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ:ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ
ಶಿವಮೊಗ್ಗ, ಅಕ್ಟೋಬರ್ 6: ಅಲ್ಪಸಂಖ್ಯಾತರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಮಟ್ಟದ ಮೊದಲ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತ ಸಮುದಾಯದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಶಾಲೆಯಿಂದ ಹೊರಗುಳಿಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವುದು, ವಿದ್ಯಾರ್ಥಿಗಳಿಗೆ ಪೂರ್ವ ಹಾಗೂ ಉತ್ತರ ಶಿಕ್ಷಣದ ವಿದ್ಯಾರ್ಥಿವೇತನ ದೊರೆಯುವಂತೆ ಕ್ರಮಕೈಗೊಳ್ಳುವುದು ಹಾಗೂ ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಅಗತ್ಯ ನೆರವು ನೀಡಬೇಕು ಎಂದು ಸೂಚಿಸಿದರು.
ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಯಡಿ ಅಲ್ಪಸಂಖ್ಯಾತ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ನೋಡಿಕೊಳ್ಳಬೇಕು. ಶಾಲೆಗಳಲ್ಲಿ ಉರ್ದು ಭಾಷಾ ಶಿಕ್ಷಕರ ನೇಮಕಾತಿ ಮತ್ತು ಮದರಸಾ ಶಿಕ್ಷಣದ ಆಧುನೀಕರಣಕ್ಕೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಅಲ್ಪಸಂಖ್ಯಾತ ಸಮುದಾಯದ ಆಸಕ್ತ ಹಾಗೂ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಗಳು ದೊರೆಯುವಂತೆ ಮಾಡಬೇಕು. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು.
ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳಲ್ಲಿ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ, ಅವರ ಜೀವನಮಟ್ಟ ಸುಧಾರಣೆಗೆ ಕ್ರಮಕೈಗೊಳ್ಳಬೇಕು. ಜೊತೆಗೆ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯ ಕಾಪಾಡಲು ಹಾಗೂ ಕೋಮು ಹಿಂಸಾಚಾರವನ್ನು ತಡೆಗಟ್ಟಲು ವಿಶೇಷ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಗುರಿಗಳನ್ನು, ಶೇ.15ರಷ್ಟು ಪ್ರಮಾಣದಲ್ಲಿ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಮಕ್ಕಳ ಶಾಲಾ ದಾಖಲಾತಿಯಲ್ಲಿ ನಿಗದಿತ ಗುರಿಗಿಂತ ಹೆಚ್ಚಿನ ಸಾಧನೆ ಮಾಡಿರುವುದು ಸಂತಸದ ಸಂಗತಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಅಲ್ಪಸಂಖ್ಯಾತ ಫಲಾನುಭವಿಗಳು ಸಲ್ಲಿಸುವ ಬಹುತೇಕ ಅರ್ಜಿಗಳನ್ನು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಗಣಿಸಲಾಗಿದೆ. ವಿದ್ಯಾರ್ಥಿನಿಲಯಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಮೀಸಲಿಟ್ಟಿದ್ದ ಕೆಲವು ಸ್ಥಾನಗಳು ನಿಗದಿತ ಅವಧಿಯಲ್ಲಿ ಭರ್ತಿಯಾಗದೆ ಉಳಿದಿದ್ದ ಹಿನ್ನೆಲೆಯಲ್ಲಿ ಕಾಲಮಿತಿಯನ್ನು ವಿಸ್ತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಸ್ನಾತಕೋತ್ತರ ಪದವಿಯ ನಂತರವೂ ಶಿಕ್ಷಣ ಮುಂದುವರಿಸುತ್ತಿರುವ ಸಂಶೋಧನಾರ್ಥಿಗಳಿಂದ ಅರ್ಜಿ ಆಹ್ವಾನಿಸಿ ವಿದ್ಯಾರ್ಥಿವೇತನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಆಧುನಿಕ ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಲ್ಪಸಂಖ್ಯಾತ ಕೃಷಿ ಕುಟುಂಬಗಳಿಗಾಗಿ ಕೃಷಿ ಇಲಾಖೆ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಮೀನುಗಾರಿಕೆ ಇಲಾಖೆಯೂ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಸೊರಬ ಸೇರಿದಂತೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ರೇಷ್ಮೆ ಕೃಷಿಗೆ ಉತ್ತಮ ಅವಕಾಶಗಳಿದ್ದು, ರೇಷ್ಮೆ ಕ್ಷೇತ್ರ ವಿಸ್ತರಣೆಗೆ ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಖಬರಸ್ತಾನಕ್ಕೆ ಜಾಗ ಕಲ್ಪಿಸಲು ಮನವಿ
ಸಭೆಯಲ್ಲಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ನಾಮನಿರ್ದೇಶಿತ ಸದಸ್ಯ ಅಮೀರ್‌ಹಮ್ಝಾ ಅವರು, ಹೊಸನಗರ ಸೇರಿದಂತೆ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಖಬರಸ್ತಾನಕ್ಕೆ ಅಗತ್ಯ ಭೂಮಿ ದೊರೆಯದೆ ಸಮಸ್ಯೆಯಾಗುತ್ತಿದೆ. ಜಿಲ್ಲಾಡಳಿತದ ವತಿಯಿಂದ ಸೂಕ್ತ ಜಾಗವನ್ನು ಗುರುತಿಸಿ ಖಬರಸ್ತಾನಕ್ಕೆ ಭೂಮಿ ಒದಗಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ. ಕಾರಿಯಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗದ್ದಿಗೌಡರ, ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ನಾಮನಿರ್ದೇಶಿತ ಸದಸ್ಯರಾದ ಸಿ.ಎಸ್. ಪದ್ಮರಾಜ್, ಎಸ್. ರಿಜ್ವಾನ್, ಅಮೀರ್‌ಹಮ್ಝಾ, ಅಜೀಮ್‌ಸಾಬ್, ಸ್ಟ್ಯಾನ್ಲಿ ಸುದರ್ಶನ್, ಜಾಹಿದ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment