*ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ವಿಜೃಂಭಣೆ ಆಚರಣೆ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ*

ಶಿವಮೊಗ್ಗ, ಅ: ಅಕ್ಟೋಬರ್ 26 ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಪ್ರತಿ ವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದ್ದು, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತದೆ. ಮೆರವಣಿಗೆಯು ಸೈನ್ಸ್ ಮೈದಾನದಿಂದ ಪ್ರಾರಂಭವಾಗಿ ಕುವೆಂಪು ರಂಗಮಂದಿರದವರೆಗೆ ಸಾಗಲಿದೆ.
ಅಲಂಕಾರ ಹಾಗೂ ಆಹ್ವಾನ: ಮಹಾನಗರ ಪಾಲಿಕೆ ವತಿಯಿಂದ ನಗರದ ಮುಖ್ಯ ಭಾಗಗಳಲ್ಲಿ ಬ್ಯಾನರ್, ಫ್ಲೆಕ್ಸ್ ,ತಳಿರು ತೋರಣ, ವಾಲ್ಮೀಕಿ ವೃತ್ತಕ್ಕೆ ಅಲಂಕಾರ ಹಾಗೂ ಮೆರವಣಿಗೆಯ ಭಾವಚಿತ್ರಕ್ಕೆ ಹೂವಿನ ಅಲಂಕಾರ ಮಾಡಲು ಸೂಚಿಸಿದ ಅವರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಹಂಚುವಂತೆ ತಿಳಿಸಿದರು‌.
ಸಾಂಸ್ಕೃತಿಕ ತಂಡಗಳು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೆರವಣಿಗೆಗೆ ಜಾನಪದ ಕಲಾ ತಂಡಗಳನ್ನು ನಿಯೋಜಿಸಲು ನಿರ್ದೇಶಿಸಿದರು.
ಜಯಂತಿ ಕಾರ್ಯಕ್ರಮ ಮುಗಿದ ಬಳಿಕ ಊಟ ಹಾಗೂ ಉತ್ತಮ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಮಾಡುವಂತೆ ತಿಳಿಸಿದರು.
ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಎಸ್‌ಎಸ್‌ಎಲ್‌ಸಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗೆ ರೂ. 1 ಲಕ್ಷ ನಗದು ಬಹುಮಾನ ಈಗಾಗಲೇ ಡಿಬಿಟಿ ಮೂಲಕ ಸಂದಾಯವಾಗಿದ್ದು, ಸದರಿ ವಿದ್ಯಾರ್ಥಿಯೊಂದಿಗೆ ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಗುವುದು ಎಂದು ತಿಳಿಸಿದ ಅವರು ಸಮಾಜದ ಮುಖಂಡರ ಸಲಹೆ, ಸೂಚನೆ ಮೇರೆಗೆ ಉಪನ್ಯಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.
     ವಾಲ್ಮೀಕಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.  
ಸಮುದಾಯದ ಮುಖಂಡರ ಮನವಿ: ವಾಲ್ಮೀಕಿ ವೃತ್ತಕ್ಕೆ ಅಲಂಕಾರ ಮಾಡುವಂತೆ ಹಾಗೂ ಸಮಾಜದ ಬಾಂಧವರು ಇಲ್ಲಿಂದಲೇ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು
ಸಭೆಯಲ್ಲಿ ಜಿ.ಪಂ. ಸಿಇಓ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಎಸಿ ಡಾ. ಮೈತ್ರಿ, ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿ ಶ್ರೀನಿವಾಸ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡ ಮತ್ತು ವಿವಿಧ ಸಮುದಾಯಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.