ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯ ಪೂರ್ಣ: ಹೈಟೆನ್ಷನ್‌ ತಂತಿಗಳ ಕೆಳಭಾಗದ ಗಿಡಗಂಟೆಗಳ ತೆರವು

ಪಾರ್ಕ್ ನಿರ್ಮಿಸಿ, ಬೇಲಿ ಅಳವಡಿಸುವಂತೆ ಮಹಾನಗರ ಪಾಲಿಕೆಗೆ ಸ್ಥಳೀಯರ ಮನವಿಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯ ಸಿ, ಡಿ ಮತ್ತು ಇ ಬ್ಲಾಕ್‌ಗಳ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳಭಾಗದಲ್ಲಿ ಬೆಳೆದಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ
ಈ ಪ್ರದೇಶದಲ್ಲಿ ಗಿಡಗಂಟೆಗಳು ಬೆಳೆದು ಸಿಳ್ಳೆಗಳ ಹಾವಳಿ ಹೆಚ್ಚಾಗಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಈ ಸಮಸ್ಯೆಯನ್ನು ಸ್ಥಳೀಯರು ವಾರ್ಡ್ ಉಸ್ತುವಾರಿ ಆರೋಗ್ಯ ನಿರೀಕ್ಷಕ ಕೃಷ್ಣಮೂರ್ತಿ ಹಾಗೂ ಮೇಸ್ತ್ರಿ ಪೆಂಚಲಯ್ಯ ಅವರ ಗಮನಕ್ಕೆ ತಂದಿದ್ದರು.

ಸ್ಥಳೀಯರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ, ಹೈಟೆನ್ಷನ್ ವಿದ್ಯುತ್ ತಂತಿಗಳು ಹಾದುಹೋಗಿರುವ ಸುಮಾರು ಒಂದು ಕಿಲೋಮೀಟರ್ ಉದ್ದದ ಪ್ರದೇಶದಲ್ಲಿ ಬೆಳೆದಿದ್ದ ಗಿಡಗಂಟೆಗಳನ್ನು ಜೆಸಿಬಿ ಮತ್ತು ಹಿಟಾಚಿ ಯಂತ್ರಗಳ ಸಹಾಯದಿಂದ ಸಂಪೂರ್ಣವಾಗಿ ತೆರವುಗೊಳಿಸಿದ್ದಾರೆ. ಸುಮಾರು 15 ದಿನಗಳ ಕಾಲ ಪರಿಶ್ರಮಪಟ್ಟು ಸ್ವಚ್ಛತಾ ಕಾರ್ಯ ನಡೆಸಲಾಗಿದ್ದು, 50ರಿಂದ 100 ಲೋಡ್‌ಗಳಷ್ಟು ಕಸವನ್ನು ಲಾರಿಗಳ ಮೂಲಕ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ವಚ್ಛತಾ ಕಾರ್ಯಕ್ಕೆ ಸ್ಥಳೀಯ ವಾರ್ಡ್ ಪ್ರಮುಖರು ಹಾಗೂ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಾರ್ವಜನಿಕ ಪ್ರದೇಶವನ್ನು ಸ್ವಚ್ಛಗೊಳಿಸಲು ಶ್ರಮಿಸಿದ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.
ಕಸವನ್ನು ಎಲ್ಲೆಂದರಲ್ಲಿ ಎಸೆಯದಂತೆ ಮೇಸ್ತ್ರಿ ಪೆಂಚಲಯ್ಯ ಮನವಿ
ಸ್ವಚ್ಛತಾ ಕಾರ್ಯದ ಕುರಿತು ಮಾತನಾಡಿದ ಮೇಸ್ತ್ರಿ ಪೆಂಚಲಯ್ಯ ಅವರು, ಸ್ಥಳೀಯ ನಿವಾಸಿಗಳು ಸ್ವಚ್ಛಗೊಳಿಸಿರುವ ಪ್ರದೇಶದಲ್ಲಿ ಮತ್ತೆ ಕಸಕಡ್ಡಿಗಳನ್ನು ಎಸೆಯಬಾರದು ಎಂದು ಮನವಿ ಮಾಡಿದ್ದಾರೆ.

ಕೆಲವರು ಮನೆಯ ಕಸವನ್ನು ಮಹಾನಗರ ಪಾಲಿಕೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡದೆ, ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುತ್ತಿರುವುದರಿಂದ ಸ್ವಚ್ಛತಾ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಮನೆಯ ಕಸವನ್ನು ಕಸ ಸಂಗ್ರಹಣಾ ವಾಹನಕ್ಕೆ ನೀಡುವ ಮೂಲಕ ನಗರದ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಲು ಸಹಕರಿಸಬೇಕು ಎಂದು ಕೋರಿದ್ದಾರೆ.

ಸ್ವಚ್ಛಗೊಳಿಸಿದ ಜಾಗದಲ್ಲಿ ಪಾರ್ಕ್ ನಿರ್ಮಿಸಲು ಸ್ಥಳೀಯ ನಾಗರೀಕರ ಮನವಿ

ಗೋಪಾಲಗೌಡ ಬಡಾವಣೆಯ ಹೈಟೆನ್ಷನ್ ವಿದ್ಯುತ್ ತಂತಿಗಳ ಕೆಳಭಾಗದ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿರುವ ಹಿನ್ನೆಲೆಯಲ್ಲಿ, ಆ ಜಾಗಕ್ಕೆ ಸೂಕ್ತ ಬೇಲಿ ಅಳವಡಿಸಿ ಪಾರ್ಕ್ ಆಗಿ ಅಭಿವೃದ್ಧಿಪಡಿಸುವಂತೆ ಸ್ಥಳೀಯ ನಿವಾಸಿಗಳು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರಿಗೆ ಮನವಿ ಮಾಡಿದ್ದಾರೆ.

ಸ್ವಚ್ಛಗೊಳಿಸಿರುವ ಜಾಗದಲ್ಲಿ ಮತ್ತೆ ಗಿಡಗಂಟೆಗಳು ಬೆಳೆಯದಂತೆ ಮತ್ತು ಕಸ ಸುರಿಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಪ್ರದೇಶವನ್ನು ಸಾರ್ವಜನಿಕರ ಅನುಕೂಲಕ್ಕೆ ಬಳಸುವ ರೀತಿಯಲ್ಲಿ ಅಭಿವೃದ್ಧಿಪಡಿಸುವ ಮೂಲಕ ಬಡಾವಣೆಯ ಸೌಂದರ್ಯವನ್ನು ಹೆಚ್ಚಿಸಬೇಕು ಎಂಬುದು ನಿವಾಸಿಗಳ ಆಶಯವಾಗಿದೆ.

ಒಟ್ಟಿನಲ್ಲಿ, ಗೋಪಾಲಗೌಡ ಬಡಾವಣೆಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿರುವ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿಯೂ ಸ್ವಚ್ಛತೆ ಕಾಪಾಡಲು ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.