ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ: ಅಲ್ಲಮಪ್ರಭು ಮೈದಾನದಲ್ಲಿ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ಕಿರೀಟ ಎಂದೇ ಗುರುತಿಸಿಕೊಂಡಿರುವ ಪ್ರತಿಷ್ಠಿತ ಶಿವಮೊಗ್ಗ ದಸರಾ ಮಹೋತ್ಸವವನ್ನು ಈ ಬಾರಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ತಿಳಿಸಿದರು.
ನಗರದ ಅಲ್ಲಮಪ್ರಭು ಮೈದಾನದಲ್ಲಿ ದಸರಾ ಮಹೋತ್ಸವದ ಪ್ರಮುಖ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವೇದಿಕೆ ನಿರ್ಮಾಣಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾರ್ವಜನಿಕರು ಆರಾಮದಾಯಕವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಸುಸಜ್ಜಿತ ವೇದಿಕೆ, ವಿಶಾಲ ಆಸನ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ಸಿದ್ಧತೆಗಳು ನಿಗದಿತ ಅವಧಿಗೂ ಮುನ್ನವೇ ಪೂರ್ಣಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಭಾಕರ್ ಪಿ. ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.