ಶಿವಮೊಗ್ಗ: ಅಕ್ರಮ ವಿದ್ಯುತ್ ತಂತಿಗೆ ಕಾಡಾನೆ ಬಲಿ
ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ದುರಂತ; ಅಕ್ರಮ ವಿದ್ಯುತ್ ಲೈನ್ ಅಳವಡಿಸಿದವರ ವಿರುದ್ಧ ಕ್ರಮಕ್ಕೆ ಅರಣ್ಯ ಇಲಾಖೆ ಸಿದ್ಧತೆ
ಶಿವಮೊಗ್ಗ: ಕಾಡುಪ್ರಾಣಿಗಳ ಶಿಕಾರಿಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಕಾಡಾನೆಯೊಂದು ಮೃತಪಟ್ಟಿರುವ ದುರಂತ ಘಟನೆ ಶಿವಮೊಗ್ಗ ತಾಲೂಕಿನ ಹಾಯ್ ಹೊಳೆ ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ.
ಕಾಡಿನಿಂದ ನಾಡಿನತ್ತ ಬಂದ ಕಾಡಾನೆ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಕಾಡಾನೆಯ ಸಾವಿಗೆ ಕಾರಣವಾದ ವಿದ್ಯುತ್ ಸಂಪರ್ಕದ ಮೂಲ, ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿರುವವರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
ಕಾಡುಪ್ರಾಣಿಗಳ ಶಿಕಾರಿಗಾಗಿ ವಿದ್ಯುತ್ ತಂತಿ ಅಳವಡಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಕಾಡಾನೆಯ ಸಾವಿನಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅಕ್ರಮ ವಿದ್ಯುತ್ ತಂತಿಗಳ ಅಳವಡಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ವ್ಯಕ್ತವಾಗಿದೆ.

Leave a Comment