# ರೌಡಿಸಂ, ಗಾಂಜಾ ದಂಧೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿ ಸಚಿನ್‌ಗೆ ಗೂಂಡಾ ಕಾಯ್ದೆ ಅಸ್ತ್ರ

### ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿ ಬಂಧನ
**ಶಿವಮೊಗ್ಗ:** ಕೊಲೆಗೆ ಯತ್ನ, ಸುಲಿಗೆ, ದೊಂಬಿ, ಜೀವ ಬೆದರಿಕೆ, ಗಾಂಜಾ ಮಾರಾಟ ಹಾಗೂ ಸಾಗಾಣಿಕೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಸಚಿನ್ ಎಂ.ಎಸ್. ಅಲಿಯಾಸ್ ಸಚಿನ್ ಅಲಿಯಾಸ್ ಶ್ಯಾಡೋ ವಿರುದ್ಧ ಜಿಲ್ಲಾಡಳಿತ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ, ಜಯನಗರ, ದೊಡ್ಡಪೇಟೆ, ಕೋಟೆ, ವಿನೋಬನಗರ ಹಾಗೂ ಆನಂದಪುರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈತನ ವಿರುದ್ಧ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ, ಸಾಮಾನ್ಯ ಕಾನೂನು ಕ್ರಮಗಳಿಂದ ಈತನ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಸಾಧ್ಯವಾಗದ ಕಾರಣ ಕರ್ನಾಟಕ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿತ್ತು.
ಪೊಲೀಸ್ ಇಲಾಖೆಯ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು 2026ರ ನವೆಂಬರ್ 6ರಂದು ಸಚಿನ್‌ನನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸುವಂತೆ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನವೆಂಬರ್ 7ರಂದು ಆರೋಪಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿ ಬಂಧನದಲ್ಲಿರಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಆರೋಪಿಯ ವಿರುದ್ಧ ಗೂಂಡಾ ಕಾಯ್ದೆಯಡಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮವು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.