ಹಿರಿಯ ನಿವೃತ್ತ ಪೊಲೀಸ್ ಅಧಿಕಾರಿ ಮೂಡಲಗಿರಿಯಪ್ಪ ನಿಧನ
ಶಿವಮೊಗ್ಗ: ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿ, ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ (ಎಎಸ್ಐ) ನಿವೃತ್ತರಾಗಿದ್ದ ಶ್ರೀ ಮೂಡಲಗಿರಿಯಪ್ಪ ತಂದೆ ಗುರುಪಾದಪ್ಪ (90) ಅವರು ವಯೋಸಹಜ ಅನಾರೋಗ್ಯದಿಂದ ಬುಧವಾರ (ನ.11) ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ ಗ್ರಾಮದವರಾಗಿದ್ದು, ಪ್ರಸ್ತುತ ಶಿವಮೊಗ್ಗದ ನವಲೆ ಬಸವಾಪುರದಲ್ಲಿ ವಾಸವಾಗಿದ್ದರು. 1936ರ ಜುಲೈ 1ರಂದು ಜನಿಸಿದ ಅವರು, 1961ರ ಜುಲೈ 10ರಂದು ಪೊಲೀಸ್ ಇಲಾಖೆಗೆ ಆಯ್ಕೆಯಾಗಿ ಸೇವೆಗೆ ಸೇರ್ಪಡೆಯಾಗಿದ್ದರು. ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ, 1994ರ ಜೂನ್ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದರು.
ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸದಸ್ಯರಾಗಿದ್ದ ಅವರು, ಸಂಘದ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಚಿಕ್ಕೇಗೌಡರ ಆತ್ಮೀಯ ಸ್ನೇಹಿತರಾಗಿದ್ದರು. ಅವರ ನಿಧನಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಸಂಘದ ವತಿಯಿಂದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಮೃತರು ಪತ್ನಿ ದೇವಮ್ಮ, ಪುತ್ರರಾದ ಶ್ರೀನಿವಾಸ ಮತ್ತು ಮಧುಸೂದನ್ ಸೇರಿದಂತೆ ಅಪಾರ ಬಂಧುಬಳಗ, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಶಿವಮೊಗ್ಗದ ನವಲೆ ಬಸವಾಪುರಕ್ಕೆ ಕೊಂಡೊಯ್ದು, ನಂತರ ಅವರ ಮೂಲ ಗ್ರಾಮವಾದ ಶ್ರೀರಾಂಪುರಕ್ಕೆ ಕೊಂಡೊಯ್ಯಲಾಗುವುದು ಎಂದು ತಿಳಿದುಬಂದಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ವತಿಯಿಂದ ಪ್ರಾರ್ಥಿಸಲಾಗಿದೆ.

Leave a Comment